ಕರ್ನಾಟಕ: ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಮುಂಗಾರು ಮಳೆಯ ಆಗಮನದ ಜೊತೆಗೆ ಮೋಡದ ವಾತಾವರಣ ಮತ್ತು ತಂಪಾದ ತಾಪಮಾನವು ಸೋಂಕಿನ ಹರಡುವಿಕೆಗೆ ಪೂರಕವಾಗಿದೆ. ಈ ನಡುವೆ, ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆಯು SARI (ತೀವ್ರ ಉಸಿರಾಟದ ಕಾಯಿಲೆ) ಲಕ್ಷಣಗಳನ್ನು ಹೊಂದಿರುವವರಿಗೆ ಕೊವಿಡ್ ಟೆಸ್ಟಿಂಗ್ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಕೊರೊನಾ ಪಾಸಿಟಿವಿಟಿ ದರವು ಶೇಕಡಾ 24ರ ಗಡಿಯನ್ನು ದಾಟಿದೆ. ಕಳೆದ 24 ಗಂಟೆಗಳಲ್ಲಿ 114 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 367ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಕೇಸ್ಗಳು ಶತಕ ಬಾರಿಸಿ, ಶರವೇಗದಲ್ಲಿ ಮುನ್ನುಗ್ಗುತ್ತಿದ್ದು ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಏರಿಕೆಯು ಎಚ್ಚರಿಕೆಯ ಕರೆಗಂಟೆಯನ್ನು ಬಾರಿಸಿದ್ದು, ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈ ತೊಳೆಯುವುದನ್ನು ಮುಂದುವರೆಸಬೇಕಾಗಿದೆ.
ಮೈಸೂರಿನ 63 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ವ್ಯಕ್ತಿಯು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೇ 15 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 25 ರಂದು ಮೃತಪಟ್ಟಿದ್ದಾರೆ. ಬಳಿಕ ಈ ವ್ಯಕ್ತಿಯ ಕೊವಿಡ್ ವರದಿಯು ಪಾಸಿಟಿವ್ ಎಂದು ದೃಢಪಟ್ಟಿದೆ. ಈ ಘಟನೆಯು ರಾಜ್ಯದಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆಯನ್ನು 3ಕ್ಕೆ ಏರಿಸಿದೆ.
ಕೊರೊನಾ ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಇಲಾಖೆಯು SARI ಲಕ್ಷಣಗಳನ್ನು ಹೊಂದಿರುವ ಎಲ್ಲರಿಗೂ ಕೊವಿಡ್ ಟೆಸ್ಟಿಂಗ್ ಕಡ್ಡಾಯಗೊಳಿಸಿದೆ. ಸ್ವ್ಯಾಬ್ ಸಂಗ್ರಹಿಸಿದ ದಿನವೇ ಪ್ರಯೋಗಾಲಯಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ. ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ.
ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಮಕ್ಕಳಿಗೆ ಸೋಂಕು ಹರಡದಂತೆ ಪೋಷಕರು ವಿಶೇಷ ಎಚ್ಚರಿಕೆ ವಹಿಸಬೇಕಿದೆ. ಮಾಸ್ಕ್ ಧರಿಸುವುದು, ಆಗಾಗ ಕೈ ತೊಳೆಯುವುದು ಮತ್ತು ಜನಸಂದಣಿಯನ್ನು ತಪ್ಪಿಸುವುದು ಮುಂತಾದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.







